ಕ್ಲೌಡ್ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಸಂಶೋಧನೆಗೆ ಆದ್ಯತೆ ನೀಡಬೇಕು : ಪಿ.ಜೆ. ಭಟ್
ಪುತ್ತೂರು : ಕ್ಲೌಡ್ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಸಂಶೋಧನೆ ಮಾಡಬಹುದಾಗಿದ್ದು ಆ ಕುರಿತು ಯುವ ಜನರು ಆಸಕ್ತಿ ವಹಿಸಿ ಸಂಶೋಧನೆಯಲ್ಲಿ ತೊಡಗಬೇಕು. ಪ್ರಸ್ತುತ ಯುಗದಲ್ಲಿ ತಿಳಿದು ಅಥವಾ ತಿಳಿಯದೆ ಎಲ್ಲಾ ಕ್ಷೇತ್ರದಲ್ಲಿಯೂ ಕ್ಲೌಡ್ ಕಂಪ್ಯೂಟಿಂಗ್ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು ಹೈ ಫರ್ಫಾರ್ಮೆನ್ಸ್ ಕಂಪ್ಯೂಟಿಂಗ್ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ಲಭಿಸುವಂತಾಗಬೇಕು. ಕ್ಲೌಡ್ ಕಂಪ್ಯೂಟಿಂಗ್ ಹಾಗೂ ಹೈ ಫರ್ಫಾರ್ಮೆನ್ಸ್ ಕಂಪ್ಯೂಟಿಂಗ್ ವಲಯವು ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ ಎಂದು ಇಸ್ರೋದ ನಿವೃತ್ತ ವಿಜ್ಞಾನಿ ಪಿ. ಜೆ. ಭಟ್ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಐ.ಟಿ. ಕ್ಲಬ್ನ ಸಹಯೋಗದಲ್ಲಿ ಯು.ಜಿ.ಸಿ. ಪ್ರಯೋಜಿತ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕ ಮತ್ತು ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ವಿಘ್ನೇಶ್ವರ ವರ್ಮುಡಿ ಮಾತನಾಡಿ ಭಾರತ ಕೃಷಿ ಪ್ರಧಾನ ದೇಶವಾಗಿರುವ ಕಾರಣ ಕೃಷಿಯ ಅಭ್ಯುದಯವನ್ನು ಮಾಡುವುದಕ್ಕಾಗಿ ಕ್ಲೌಡ್ ಕಂಪ್ಯೂಟಿಂಗ್ ತಂತ್ರಜ್ಞಾನವನ್ನು ಬಳಸಬೇಕು. ಇದರಿಂದಾಗಿ ಭಾರತದ ಆರ್ಥಿಕತೆಯ ಅಭಿವೃದ್ಧಿಯೂ ಸಾಧ್ಯವಾಗುತ್ತದೆ ಹಾಗೂ ಕೃಷಿ ಕ್ಷೇತ್ರದಲ್ಲಿನ ಒತ್ತಡಗಳನ್ನು ಕಡಿಮೆ ಮಾಡಬಹುದು ಎಂದು ಕಿವಿ ಮಾತು ನುಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಪ್ರೊ.ಶಂಕರ ನಾರಾಯಣ ಭಟ್ ಉಪಸ್ಥಿತರಿದ್ದರು. ಈ ಸಂದರ್ಭ ವಿವಿಧ ಕಾಲೇಜಿನ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಉಪನ್ಯಾಸಕಿ ಉಷಾ ಮುರಳಿಧರ್ ಸ್ವಾಗತಿಸಿ, ಜೀವಿತಾ ಹಾಗೂ ದೀಪ್ತಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಸಂಯೋಜಕ ಹಾಗೂ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ವಂದಿಸಿದರು.